ಮಂಗಳೂರು: ನಗರದಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃತ್ಯ ನಡೆದ 24 ಗಂಟೆಗಳ ಒಳಗಾಗಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಈ ಘಟನೆ ನಿನ್ನೆ ರಾತ್ರಿ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಯುವತಿಯೊಬ್ಬಳ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪಿ ಕೇಳಿಬಂದಿದೆ. ಘಟನೆಯ ನಂತರ ರಾತ್ರಿ ಸುಮಾರು 1.30ರ ಸುಮಾರಿಗೆ ತಕ್ಷಣ 112 ಹೆಲ್ಪ್ಲೈನ್ಗೆ ಕರೆಮಾಡಿ ಈ ಬಗ್ಗೆ ಮಾಹಿತಿ ನೀಡಲಾಗಿತ್ತು.
ಘಟನೆಯ ತುರ್ತು ಸ್ವರೂಪವನ್ನು ಗಮನಿಸಿದ ಉಳ್ಳಾಲ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಕೃತ್ಯ ನಡೆದ 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿಗೆ ಸೇರಿರುವ ಆಟೋ ಚಾಲಕ ಪ್ರಭುರಾಜ್ (38), ಮಣಿ ಹಾಗೂ ಕುಂಪಲದ ಮಿಥುನ್ (30) ಎಂದು ಗುರುತಿಸಲಾಗಿದೆ.
ಪೊಲೀಸ್ ಇಲಾಖೆ ಘಟನೆಯ ಗಂಭೀರತೆಯನ್ನು ಮನಗಂಡು ಪ್ರತ್ಯುತ್ತರ ಕ್ರಮ ಕೈಗೊಂಡಿದ್ದು, ಹೆಚ್ಚಿನ ಆರೋಪಿಗಳು ಇದ್ದರೆ ಅವರ ಪತ್ತೆಗೆ ತನಿಖೆ ಮುಂದುವರೆದಿದೆ. ಈ ಘಟನೆ ಮಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಚಿಂತನೆ ಮೂಡಿಸಿದೆ.
ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡುತ್ತಾ, “ಘಟನೆ ನಡೆದಿದೆ ಎಂಬ ಮಾಹಿತಿ ಬಂದ ತಕ್ಷಣದಿಂದಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು. ಸಂತ್ರಸ್ತೆ ನೀಡಿದ ಮಾಹಿತಿಯ ಆಧಾರದ ಮೇಲೆ ಸ್ಥಳೀಯ ಬೇಟಿ ಮತ್ತು ತಾಂತ್ರಿಕ ಸಂಪನ್ಮೂಲಗಳ ಸಹಾಯದಿಂದ ಆರೋಪಿಗಳನ್ನು ಪತ್ತೆ ಹಚ್ಚಲಾಯಿತು,” ಎಂದು ತಿಳಿಸಿದ್ದಾರೆ.
ಈ ಘಟನೆ ಸಂಬಂಧಿಸಿದಂತೆ ಪೊಲೀಸರು ಯುವತಿಯ ವೈದ್ಯಕೀಯ ಪರೀಕ್ಷೆ ಸೇರಿದಂತೆ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಾರ್ವಜನಿಕರಿಂದ ಸಹಕಾರ ಕೋರಲಾಗಿದೆ ಹಾಗೂ ಯಾವುದೇ ಮಾಹಿತಿಯಿದ್ದರೆ ಅಧಿಕಾರಿಗಳಿಗೆ ತಿಳಿಸಲು ಮನವಿ ಮಾಡಲಾಗಿದೆ.
ಮಂಗಳೂರು ನಗರದಲ್ಲಿ ಈ ರೀತಿಯ ಘಟನೆಗಳು ಸಂಭವಿಸದಂತೆ ತಡೆಯಲು ಪೊಲೀಸರಿಂದ ನಿಗಾ ಬಿಗಿಗೊಳಿಸಲಾಗಿದೆ. ಮಹಿಳೆಯರು ಸುರಕ್ಷಿತವಾಗಿರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.














