ಮೈಸೂರು(Mysuru): 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧವಾಗಬೇಕು. ಇಲ್ಲಿನ 11 ಕ್ಷೇತ್ರಗಳನ್ನೂ ಗೆಲ್ಲಲು ಪ್ರಯತ್ನಿಸಬೇಕು. ಹತ್ತನ್ನಾದರೂ ಗೆದ್ದೇ ಗೆಲ್ಲಲೇಬೇಕು. ಇದು ಸಾಧ್ಯವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ತಾಲ್ಲೂಕಿನ ವರಕೋಡು ಸಮೀಪದ ನ್ಯೂ ಓಷನ್ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಇದಕ್ಕಾಗಿ ನಾವು ಜನರ ಬಳಿಗೆ ಹೋಗಬೇಕು. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಜನರಿಗೆ ತಿಳಿಸಬೇಕು ರಾಜ್ಯದಾದ್ಯಂತ ಕಾಂಗ್ರೆಸ್ ಪರವಾಗಿ ಅಭಿಪ್ರಾಯಗಳನ್ನು ಮೂಡಿಸಬೇಕು. ಮನಮೋಹನ್ ಸಿಂಗ್ ಹಾಗೂ ನಮ್ಮ ಸರ್ಕಾರವಿದ್ದಾಗ ಮಾಡಿದ್ದ ಸಾಧನೆಯನ್ನು ತಿಳಿಸಬೇಕು. ಆಗ ಪಕ್ಷ ಶೇಕಡ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಾದ್ಯಂತ ಕಾಂಗ್ರೆಸ್ ಪರವಾದ ವಾತಾವರಣ ನಿರ್ಮಾಣವಾಗಿದೆ. ಇಲ್ಲದಿದ್ದರೆ ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಗೆಲ್ಲಲು ಆಗುತ್ತಿರಲಿಲ್ಲ. ಇಲ್ಲಿ ನಮ್ಮ ಹೋರಾಟ ಇರುವುದು ಜೆಡಿಎಸ್ ಜೊತೆ. ಆ ಪಕ್ಷದವರು ಇಲ್ಲು ಮೂರನೇ ಸ್ಥಾನಕ್ಕೆ ಹೋಗಿದ್ದಾರೆ. ಈ ಪರಿಸ್ಥಿತಿ ಬಳಸಿಕೊಳ್ಳಬೇಕು ಎಂದರು.
ಮಾಜಿ ಶಾಸಕರು, ಸಂಸದರು ಒಗ್ಗಟ್ಟಿನಿಂದ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಮುಖಂಡರಾದ ಡಾ.ಎಚ್.ಸಿ. ಮಹಾದೇವಪ್ಪ, ತನ್ವೀರ್ ಸೇಠ್, ವಾಸು, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಮಂಜುನಾಥ್, ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಪಕ್ಷದ ನಗರ ಘಟಕದ ಅಧ್ಯಕ್ಷ ಮೂರ್ತಿ, ಗ್ರಾಮಾಂತರ ಜಿಲ್ಲಾ ಘಟಕ ಅಧ್ಯಕ್ಷ ಡಾ. ವಿಜಯಕುಮಾರ್ ಮೊದಲಾದವರು ಭಾಗವಹಿಸಿದ್ದರು.