ಮನೆ ರಾಜ್ಯ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ಕಾರ ಸರ್ವ ಸನ್ನದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ಕಾರ ಸರ್ವ ಸನ್ನದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು: ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಣರಾಜ್ಯೋತ್ಸವದ ಸಂದರ್ಭ ನೀಡಿದ ಸಂದೇಶದಲ್ಲಿ ಅವರು, ಕೋಮುವಾದ ಆಂತಕ ಸೃಷ್ಟಿಸುತ್ತಿದೆ. ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ನಮ್ಮ ಕನಸಿನ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ವಿಷಾದದಿಂದಲೇ ಒಪ್ಪಬೇಕಾಗಿದೆ. ಅಭಿವೃದ್ಧಿಯ ದಾರಿಯಲ್ಲಿ ಹೊಸ ಸವಾಲುಗಳು ಎದುರಾಗಿವೆ ಎಂದು ಹೇಳಿದರು.

ಮುಖ್ಯವಾಗಿ ಇತ್ತೀಚೆಗೆ ಹೆಡೆ ಎತ್ತಿರುವ ಕೋಮುವಾದ, ನಮ್ಮ ಜಾತ್ಯತೀತ ಸಮಾಜಕ್ಕೆ ಅಪಾಯವನ್ನುಂಟು ಮಾಡುವ ಆತಂಕವನ್ನು ಅನುಭವಿಸುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು ನೀಡಿರುವ ಜನಮತದಲ್ಲಿ ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥಮಾಡಿಕೊಂಡಿದೆ. ನಮ್ಮ ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ. ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು. ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜಾತಿ-ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಸಂವಿಧಾನ ಬದಲಾವಣೆ ಚರ್ಚೆಯನ್ನು ಸಿಎಂ‌ ಸಿದ್ದರಾಮಯ್ಯ ಖಂಡಿಸಿದರು. ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿ ಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ದನಿಗೂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದು, ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ. ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ ಎಂದರು.

ಹಿಂದಿನ ಲೇಖನಮುಂಬೈ: ರೆಸ್ಟೋರೆಂಟ್​ ನಲ್ಲಿ ಅಗ್ನಿ ಅವಘಡ, ಓರ್ವ ಸಾವು
ಮುಂದಿನ ಲೇಖನನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ 75 ನೇ ಗಣರಾಜ್ಯೋತ್ಸವ ಆಚರಣೆ