ಮನೆ ರಾಜ್ಯ ‘ಗ್ರೇಟರ್ ಬೆಂಗಳೂರು ಈಗ ವಾಟರ್ ಬೆಂಗಳೂರು’: ಆರ್. ಅಶೋಕ್

‘ಗ್ರೇಟರ್ ಬೆಂಗಳೂರು ಈಗ ವಾಟರ್ ಬೆಂಗಳೂರು’: ಆರ್. ಅಶೋಕ್

0

ಬೆಂಗಳೂರು : “ಗ್ರೇಟರ್ ಬೆಂಗಳೂರು ಈಗ ವಾಟರ್ ಬೆಂಗಳೂರು ಆಗಿದೆ” ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿ, ರಾಜಧಾನಿಯ ಮಳೆ ಸಮಸ್ಯೆಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣವೆಂದು ಹೇಳಿದರು. ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ? ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ 5 ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು.

ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್ ಬೋರ್ಡ್ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬೆಂಗಳೂರಿನ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ಗುಡುಗಿದರು.

ಏ. 15ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು.

ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್ ಬೆಂಗಳೂರು ಹೋಗಿ ವಾಟರ್ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ಕಿಡಿ ಕಾರಿದರು.