ಮೈಸೂರು: ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ನೀಡುತ್ತಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಹಾರಾಜ ಕಾಲೇಜು ಮೈದಾನದಲ್ಲಿ ಸಿದ್ದತೆ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಗೃಹಲಕ್ಷ್ಮೀ ಯೋಜನೆಗೆ 1.18 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ. ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಉದ್ಘಾಟನೆಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದರು.
ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಗಳ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ ಪ್ರತಿ ವಾರ್ಡ್, ಗ್ರಾಮ ಪಂಚಾಯತ್ ಸೇರಿ ಏಕಕಾಲದಲ್ಲಿ ಎಲ್ಲಾ ಕಡೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಇಡೀ ದೇಶದಲ್ಲೇ ಇದೊಂದು ಅದ್ಭುತ ಕಾರ್ಯಕ್ರಮವಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿ ಗ್ರಾಮದ ಪಂಚಾಯತಿಯ ಜನರ ಬಗ್ಗೆ ಮಾಹಿತಿ ನೀಡಲಿದೆ. ಈ ಎಲ್ಲಾ ಜಿಲ್ಲೆಗಳ ಫಲಾನುಭವಿಗಳನ್ನ ಕರೆತರಲು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ 140 ಅಡಿ ಸ್ಕ್ರೀನ್ ಅಳವಡಿಸಲಾಗಿದ್ದು, ಇಡೀ ಕಾರ್ಯಕ್ರಮ 10 ಸಾವಿರ ಸ್ಥಳಗಳಲ್ಲಿ ನೇರ ಪ್ರಸಾರ ಆಗಲಿದೆ. ನೊಂದಾಯಿತ ಫಲಾನುಭವಿಗಳಿಗೂ ಖುದ್ದಾಗಿ ಆಹ್ವಾನ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳಿಗೆ ನೀರಿನ ವ್ಯವಸ್ಥೆ ಹೊರತು ಬೇರೆ ಏನು ವ್ಯವಸ್ಥೆ ಮಾಡಿಲ್ಲ. ಪಿಡಿಓ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಜನರನ್ನ ಕರೆತರುವ ಜವಾಬ್ದಾರಿ ನೀಡಲಾಗಿದೆ. ಒಂದು ಲಕ್ಷ ಆಸನ ವ್ಯವಸ್ಥೆ ಮಾಡಲಾಗಿದೆ, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಫಲಾನುಭವಿಗಳ ಜೊತೆಗೆ ಸಂವಾದ ಕಾರ್ಯಕ್ರಮ ನಡೆಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಡಿ.ಕೆ ಶಿವಕುಮಾರ್ ಅವರಿಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಹದೇವಪ್ಪ ಇತರರು ಸಾಥ್ ನೀಡಿದರು.