ಮನೆ ರಾಜ್ಯ ಹಾವೇರಿ ಪಟಾಕಿ ಗೋದಾಮು ದುರಂತ: ಮಾಲೀಕನ ಬಂಧನ-  ತನಿಖೆಗೆ ಒತ್ತಾಯಿಸಿದ ಬಿಜೆಪಿ

ಹಾವೇರಿ ಪಟಾಕಿ ಗೋದಾಮು ದುರಂತ: ಮಾಲೀಕನ ಬಂಧನ-  ತನಿಖೆಗೆ ಒತ್ತಾಯಿಸಿದ ಬಿಜೆಪಿ

0

ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಸಂಬಂಧ ಪೊಲೀಸರು ಮಾಲೀಕನನ್ನು ಬಂಧಿಸಿದ್ದಾರೆ.

ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಈ ರೀತಿಯ ಪಟಾಕಿ ಸಿಡಿಮದ್ದು ದಾಸ್ತಾನು ಕೇಂದ್ರಗಳ ಕುರಿತು ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಸಜೀವ ದಹನವಾಗಿರುವ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು. ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಪಟಾಕಿ ಗೋದಾಮಿನ ಬೆಂಕಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಸುಟ್ಟು ಕರಕಲಾದ ಘಟನೆ ದುರದೃಷ್ಟಕರ. ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ನಡೆಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಬೆಂಕಿ ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ರಾಜ್ಯ ಬಿಜೆಪಿ ವತಿಯಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.