ಮನೆ ರಾಜಕೀಯ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸುದೀರ್ಘ ಚರ್ಚೆ...

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

0

ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ಅಂತಿಮ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು.

ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು.

ಅಮಿತ್ ಶಾ, ನಡ್ಡಾ ಅವರ ಜತೆ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು,  ಕರ್ನಾಟಕದ ಪ್ರತಿಯೊಂದು ವಿದ್ಯಮಾನವನ್ನು ಅವರ ಗಮನಕ್ಕೆ ತಂದರು.

ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳೆಲ್ಲವನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜತೆ ಕೂತು ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿಗಳಿಗೆ ಹೇಳಿದರು.

ಅಲ್ಲದೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಮತ್ತು ನಡ್ಡಾ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬುವುದಕ್ಕೆ ಮೊದಲೇ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಜನರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಜನರ ಗಮನಕ್ಕೆ ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ನಾಯಕರು ಚರ್ಚೆ ನಡೆಸಿದರು.

ಮಾತುಕತೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿಗಳು; ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಬರಪೀಡಿತ ಜನರಿಗೆ ಕೊಟ್ಟಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಈ ಬಗ್ಗೆ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಹಿಂದಿನ ಲೇಖನಶ್ರೀರಂಗಪಟ್ಟಣದ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಮದರಾಸ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ಮುಂದಿನ ಲೇಖನಭಾರತ ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ