ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಆಗಿದೆ.
ಬೆಂಗಳೂರಿನ ೪೨ ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ. ೫ ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಹೆಚ್.ಡಿ.ರೇವಣ್ಣ ಕೋರ್ಟ್ ಮೊರೆ ಹೋಗಿದ್ದರು. ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿ ಮೇ ೧೬ರಂದು ಇಂದು ಮಧ್ಯಾಹ್ನದವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಮೂರು ದಿನಗಳ ಹಿಂದೆ ರೇವಣ್ಣ ಅವರಿಗೆ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಇದಾದ ನಂತರ, ಜಾಮೀನು ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಲೈಂಗಿಕ ದೌರ್ಜನ್ಯದ ಕೇಸ್‌ನಡಿ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ನಿರಾಳವಾಗುವಂತಾಗಿದೆ. ಇನ್ನು ರೇವಣ್ಣ ಅವರ ಮೇಲೆ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಕೇಸ್‌ನಲ್ಲಿಯೂ ಜಾಮೀನು ಪಡೆದು ಹೊರಗಿದ್ದಾರೆ.