ಮನೆ ಕಾನೂನು ಎಚ್’ಡಿಕೆ ಕುಟುಂಬ ಸರ್ಕಾರಿ ಭೂ ಕಬಳಿಕೆ ಆರೋಪ: ಮುಖ್ಯ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಸೂಚಿಸಿದ ಹೈಕೋರ್ಟ್

ಎಚ್’ಡಿಕೆ ಕುಟುಂಬ ಸರ್ಕಾರಿ ಭೂ ಕಬಳಿಕೆ ಆರೋಪ: ಮುಖ್ಯ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಸೂಚಿಸಿದ ಹೈಕೋರ್ಟ್

0

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಶಾಸಕ ಡಿ ಸಿ ತಮ್ಮಣ್ಣ ಮತ್ತಿತರರ ವಿರುದ್ಧದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕಬಳಿಕೆಯಾದ ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯುವಲ್ಲಿ ಸರ್ಕಾರ ವಿಫಲವಾಗಿರುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಚಾರಣೆಗೆ ಖುದ್ದು ಹಾಜರಿರಬೇಕೆಂದು ಹೈಕೋರ್ಟ್ ಗುರುವಾರ ಆದೇಶಿಸಿದೆ.

ಈ ವಿಚಾರವಾಗಿ ಸಮಾಜ ಪರಿವರ್ತನಾ ಸಮುದಾಯದ ಎಸ್ ಆರ್ ಹಿರೇಮಠ ಅವರು ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಕಾರ್ಯದರ್ಶಿ ಸಲ್ಲಿಸಿದ ಪ್ರಮಾಣಪತ್ರವನ್ನು ಒಪ್ಪದ ನ್ಯಾಯಾಲಯ “ಭೂಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಗೆ ಲೋಕಾಯುಕ್ತ 2014ರಲ್ಲಿ ಆದೇಶ ನೀಡಿದೆ. ಆದರೆ, ಸರ್ಕಾರ ಯಾವುದೇ ಸಮರ್ಪಕ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಮುಂದಿನ ವಿಚಾರಣೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗಬೇಕು” ಎಂದು ಆದೇಶಿಸಿ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಿತು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಗಳು ಸೇರಿ ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಿದ್ದರು. ಲೋಕಾಯುಕ್ತರ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಹಿಂದಿನ ಲೇಖನಹಳದಿ ಬಣ್ಣದಲ್ಲಿ ಐಫೋನ್‌ 14 ಪ್ಲಸ್‌’ನ ನೂತನ ಆವೃತ್ತಿಯ ಮೊಬೈಲ್ ಬಿಡುಗಡೆ
ಮುಂದಿನ ಲೇಖನಕೆಎಸ್’ಆರ್’ಟಿಸಿ ಬಸ್ ಪಲ್ಟಿ: 25 ಮಂದಿಗೆ ಗಾಯ