ಬೆಂಗಳೂರು: ರಾಜ್ಯದ ಹಲವೆಡೆ, ವಿಶೇಷವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಏಪ್ರಿಲ್ 16ರಿಂದ 18ರ ತನಕ ಈ ಪರಿಣಾಮಗಳು ಹೆಚ್ಚಾಗಿ ಕಾಣಿಸಿಕೊಳ್ಳಲಿದ್ದು, ರಾಜ್ಯದ ಜನತೆ ಹಾಗೂ ಆಡಳಿತ ವ್ಯವಸ್ಥೆಗೂ ಮುನ್ನೆಚ್ಚರಿಕೆಯ ಸೂಚನೆ ನೀಡಲಾಗಿದೆ.
ಮಂಗಳವಾರ ಏ.16ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಪೈಕಿ ಕೊಡಗು ಜಿಲ್ಲೆಯಲ್ಲಿ ಗುಡುಗು-ಸಿಡಿಲಿನೊಂದಿಗೆ ಅತಿಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಏ.18ರ ವರೆಗೆ ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.
ಹವಾಮಾನ ಇಲಾಖೆ ನೀಡಿದ ಈ ಮುನ್ಸೂಚನೆಯಿಂದ ಸಾರ್ವಜನಿಕರು ಅನಾವಶ್ಯಕ ಪ್ರಯಾಣ ತಪ್ಪಿಸಿಕೊಳ್ಳುವುದು, ಸುರಕ್ಷಿತ ಪ್ರದೇಶಗಳಲ್ಲಿ ಇರುವುದು ಹಾಗೂ ಪ್ರವಾಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯವಾಗಿದೆ. ಜೊತೆಗೆ, ಗ್ರಾಮೀಣ ಪ್ರದೇಶಗಳಲ್ಲಿರುವ ಜನತೆ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು.
ನಗರ ಪ್ರದೇಶಗಳಲ್ಲಿ, ಮಳೆ ಹಿನ್ನೆಲೆ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಜಲಾವೃತ ರಸ್ತೆಗಳು ಹಾಗೂ ಕಡಿಮೆ ಮಟ್ಟದ ಸೇತುವೆಗಳಲ್ಲಿ ಹೋಗುವ ಸಂದರ್ಭದಲ್ಲಿ ವಿಶೇಷ ಗಮನ ವಹಿಸುವಂತೆ ಕೂಡ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ನಗರ ಸಭೆಗಳು, ಜಿಲ್ಲಾ ಆಡಳಿತಗಳು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸಜ್ಜಾಗಿದ್ದು, ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಲು ಸಿದ್ಧವಾಗಿವೆ. ಹವಾಮಾನ ಪರಿಸ್ಥಿತಿ ಕುರಿತು ನಿರಂತರ ನೋಟವಿಡಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಹವಾಮಾನ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ಮೊಬೈಲ್ ಆಪ್‌ಗಳನ್ನು ಸಂಪರ್ಕಿಸಬಹುದಾಗಿದೆ.