ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಹಾಗೂ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಕರಾವಳಿ ಹಾಗೂ ಒಳನಾಡಿನ ಹಲವೆಡೆ ಶನಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ತೀವ್ರತೆ ಭಾನುವಾರ ಹೆಚ್ಚುವ ಸಂಭವವಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಸೋಮವಾರವೂ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. 13 ಜಿಲ್ಲೆಗಳಿಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ನೀಡಿದೆ.
ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.