ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗೆ ಸೋಮವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮಂಗಳವಾರವೂ ಕೋಲಾರ, ರಾಮನಗರ ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳ ಜತೆಗೆ ಉತ್ತರ ಕನ್ನಡ, ದಾವಣಗೆರೆ, ಬಳ್ಳಾರಿ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಇದರಿಂದಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಉದ್ದಕ್ಕೂ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಇರಲಿದೆ, ಗಂಟೆಗೆ 35 ಕಿ.ಮೀ.ಗಳಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.