ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜು. 25ರಂದೂ ಅಂಗನವಾಡಿ ಗಳಿಗೆ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ.
ಮುಂಜಾಗ್ರತಾ ಕ್ರಮವಾಗಿ ಸೋಮವಾರ ರಜೆ ಘೋಷಿಸಲಾಗಿತ್ತು, ಮಂಗಳವಾರವೂ ರಜೆ ವಿಸ್ತರಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ. ಮರ, ಬರೆ, ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ರಸ್ತೆ ಮತ್ತು ಕಾಲು ಸೇತುವೆಗಳು ಕೊಚ್ಚಿ ಹೋದ ಘಟನೆಯೂ ನಡೆದಿದೆ.
ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ. ವಾಹನಗಳ ಸಂಚಾರ ದುಸ್ತರವಾಗಿದೆ.