ಮೈಸೂರು: ಕೇರಳದ ವಯನಾಡಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.
ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು, ಹೊರ ಹರಿವಿನಲ್ಲೂ ಏರಿಕೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಮಟ್ಟ 2284 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2281.59 ಅಡಿ ಇದೆ.
49,206 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು , 50,000 ಕ್ಯೂಸೆಕ್ ನೀರನ್ನ ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿ ಪಾತ್ರದ ಜನತೆ ಎಚ್ಚರಿಕೆ ವಹಿಸುವಂತೆ ಮೈಸೂರು ಜಿಲ್ಲಾಡಳಿತ ಸೂಚನೆ ನೀಡಿದೆ.