ವಾಣಿಜ್ಯ ನಗರ ಹುಬ್ಬಳ್ಳಿಯ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ವಾಹನ ದಟ್ಟಣೆ ನಿವಾರಿಸಲು ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಸಾರ್ವಜನಿಕ ಕಾರ್ಯಕರ್ತರು ಎಂದು ಹೇಳಿಕೊಂಡಿರುವ ವಿಕ್ರಂ ಸೇರಿದಂತೆ 86 ಮಂದಿ ಸಲ್ಲಿಸಿದ್ದ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲವು ಅರ್ಜಿದಾರರು ಈ ವಿಷಯದಲ್ಲಿ ಸ್ವಲ್ಪ ಪರಿಣಿತರಿದ್ದಾರೆ ಎಂಬ ಕಾರಣಕ್ಕೆ ಅವರು ತಮಗೆ ಎಲ್ಲಾ ತಿಳಿದಿದೆ ಎಂದು ಎಲಿವೇಟೆಡ್ ಕಾರಿಡಾರ್ ಯೋಜನೆ ಕಾರ್ಯಸಾಧುವಲ್ಲ ಎಂದು ಹೇಳುವುದನ್ನು ಒಪ್ಪಲಾಗದು ಎಂದು ಅರ್ಜಿ ವಜಾಗೊಳಿಸಿದೆ.
ಈಗಾಗಲೇ ಕಾರಿಡಾರ್ ನಿರ್ಮಾಣವಾಗುತ್ತಿದ್ದು, ಈ ಹಂತದಲ್ಲಿ ಹಸ್ತಕ್ಷೇಪ ಸರಿಯಲ್ಲ ಮತ್ತು ಇದರಿಂದ ಸಾರ್ವಜನಿಕ ಹಿತಾಸಕ್ತಿ ಹಾಗೂ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಪೀಠ ಆದೇಶಿಸಿದೆ.
ಯೋಜನೆಯ ಅಂದಾಜು ವೆಚ್ಚ 196 ಕೋಟಿ ರೂಪಾಯಿ ಆಗಿದ್ದು, ಈಗಾಗಲೇ ಅರ್ಧದಷ್ಟು ಕಾಮಗಾರಿ ಮುಕ್ತಾಯವಾಗಿದೆ. ಇಂತಹ ವಿಚಾರಗಳಲ್ಲಿ ನ್ಯಾಯಾಂಗ ಪರಿಣತಿ ಹೊಂದಿಲ್ಲ. ಕಾರ್ಯಾಂಗದ ಆದೇಶಗಳನ್ನು ಬದಲಿಸಲು ಸಾಧ್ಯವಿಲ್ಲ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಾಂಗ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡೇ ಯೋಜನೆಯನ್ನು ರೂಪಿಸಿದೆ. ಹಾಗಾಗಿ ಅದನ್ನು ನ್ಯಾಯಾಂಗ ಪರಾಮರ್ಶೆಗೆ ಒಳಪಡಿಸಲಾಗದು ಎಂದು ಪೀಠ ಆದೇಶಿಸಿದೆ.
ಅರ್ಜಿದಾರರ ಪರ ವಕೀಲರು, ವಾಹನ ದಟ್ಟಣೆ ನಿವಾರಣೆ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಉದ್ದೇಶಿತ ಯೋಜನೆಯಿಂದ ವಾಹನ ದಟ್ಟಣೆ ಕಡಿಮೆಯಾಗುವುದರ ಬದಲು ಇನ್ನೂ ಅಧಿಕವಾಗಲಿದೆ, ಜನರಿಗೆ ತೊಂದರೆ ಆಗುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಅಲ್ಲದೆ, ಯೋಜನೆ ಭಾರತೀಯ ರಸ್ತೆ ಕಾಂಗ್ರೆಸ್ ನಿಯಮಗಳಿಗೆ ವಿರುದ್ಧವಾಗಿದೆ. ಹಾಗಾಗಿ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಆದರೆ ಅದಕ್ಕೆ ಆಕ್ಷೇಪ ಎತ್ತಿದ ಡೆಪ್ಯೂಟಿ ಸಾಲಿಸಿಟರ್ ಜನರಲ್ ಎಚ್ ಶಾಂತಿಭೂಷಣ್, ಎಲಿವೇಟೆಡ್ ಕಾಮಗಾರಿ ಈಗಾಗಲೇ ಅರ್ಧದಷ್ಟು ಮುಕ್ತಾಯಗೊಂಡಿದೆ ಎಂದು ತಿಳಿಸಿದರು.