ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಎಫ್ಐಆರ್ ರದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.
ಮೃತ ರೈತನ ತಂದೆಯ ಹೇಳಿಕೆ ಆಧರಿಸಿ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದರು. ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ. ಪ್ರಕರಣ ರದ್ದುಪಡಿಸುವಂತೆ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದಾರೆ.
ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಬಳಿಕ ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದು
ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.
ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ದಾಖಲಿಸಿದ್ದರು. ನವೆಂಬರ್ 28ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ವಿದೇಶಕ್ಕೆ ಹೋದಾಗ ರಾಹುಲ್ ಗಾಂಧಿ ನೀಡಿದ ಕೆಲವು ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಿದ್ದೇನೆ ಎಂದು ಶಾಸಕ ಯತ್ನಳ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.