ಮನೆ ಕಾನೂನು ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

0

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

Join Our Whatsapp Group

ಅಲ್ಲದೆ, ವಿಚಾರಣಾ ನ್ಯಾಯಾಲಯ ತನ್ನ ವಿಚಾರಣಾ ಪ್ರಕ್ರಿಯೆ ಮುಂದುವರೆಸಬಹುದಾಗಿದೆ. ಆದರೆ, ಈ ಆದೇಶ ಹೈಕೋರ್ಟ್ ವಿಚಾರಣೆಗೆ ಒಳಪಡಲಿದೆ ಎಂದು ತಿಳಿಸಿದ ನ್ಯಾಯಪೀಠ.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಜ.17ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿತು.

ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಕರಣದ ಹಿನ್ನೆಲೆ: ಪ್ರಕರಣದ ಕುರಿತು ಸದಾಶಿವನಗರ ಠಾಣಾ ಪೊಲೀಸರು 2024ರ ಮಾ. 14ರಂದು ಯಡಿಯೂರಪ್ಪ ವಿರುದ್ಧ ಎಫ್‌ಐಆರ್​ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಯಡಿಯೂರಪ್ಪ ಅವರು 2024ರ ಜೂ.13ರಂದು ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಜೂ.14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣದ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತಾದರೂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿ ತನಿಖಾಧಿಕಾರಿಗಳಿಗೆ ಸೂಚಿಸಿತ್ತು.

ನಂತರ ಪ್ರಕರಣದ ಕುರಿತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿ, 2024ರ ಜು.12ರಂದು ಹೈಕೋರ್ಟ್ ಮತ್ತೊಂದು ಆದೇಶ ಮಾಡಿತ್ತು. ಅಂತಿಮವಾಗಿ 2025ರ ಜ.17ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.