ಮನೆ ಕಾನೂನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಹೈಕೋರ್ಟ್‌ ತಡೆ

0

ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಸನಗೌಡಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯವು ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಗೆ ತಡೆ ನೀಡಿತು. ಅಲ್ಲದೇ, ಮೂಲ ದೂರುದಾರರಾದ ಮಂಜುನಾಥ್ ಕಲಬುರಗಿ ಅವರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶ್ರೀನಾಥ್ ಕುಲಕರ್ಣಿ ಅವರು ಮೂಲ ದೂರುದಾರರು ಅರ್ಜಿದಾರರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ದೂರು ನೀಡಿದ್ದಾರೆ. ಅರ್ಜಿದಾರರು ಎದುರಾಳಿಗಳ ಜತೆ ಸೇರಿ ರಾಜಕೀಯ ಪಿತೂರಿ ನಡೆಸಿ ದೂರು ನೀಡಿದ್ದಾರೆ. ಆ ದೂರಿನಲ್ಲಿ ಉಲ್ಲೇಖವಾದ ಅಂಶಗಳನ್ನು ಸೇರಿಸಿ ಗದಗ ಜಿಲ್ಲಾ ನ್ಯಾಯಾಲಯ ಸಂಜ್ಞೇ ಪಡೆದು ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ, ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭಾ ಚುನಾವಣೆ ವೇಳೆ 2023 ಮೇ 2ರಂದು ಗದಗದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರ ಯತ್ನಾಳ್‌ ರೋಡ್ ಶೋ ನಡೆಸಿದ್ದರು. ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುವಾಗ ಬಜರಂಗ ದಳವನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಲಿದೆ ಎಂಬ ಪ್ರಶ್ನೆ ಹಿನ್ನೆಲೆಯಲ್ಲಿ, ಹಾಗೆ ಮಾಡಿದರೆ ‘ಎಲ್ಲಾ ಹಿಂದೂಗಳು ಬಹಿಷ್ಕಾರ’ ಹಾಕುತ್ತಾರೆ ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಗಡಿನಾಡು ಕ್ರಾಂತಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರವಾಗಿದೆ. ಆ ಮೂಲಕ ಯತ್ನಾಳ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಫೈಯಿಂಗ್ ಸ್ಕ್ವಾಡ್‌ನ ಮಂಜುನಾಥ ಕಲಬುರಗಿ ದೂರು ನೀಡಿದ್ದರು. ಆ ದೂರು ಆಧರಿಸಿ ಗದಗ ಜಿಲ್ಲಾ ನ್ಯಾಯಾಲಯ ಜನವರಿ 20ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಆ ಹಿನ್ನೆಲೆಯಲ್ಲಿ ಯತ್ನಾಳ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.