ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ನಡೆಯುವ ಸಿಇಟಿ ಪರೀಕ್ಷೆಗೂ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಹಿಜಾಬ್ ತೆಗೆದಿಡಬೇಕು. ಒಂದು ವೇಳೆ ಹಿಜಾಬ್ ಧರಿಸಿ ಬಂದರೆ ಭಾಗವಹಿಸಲು ಅವಕಾಶ ನೀಡುವುದಿಲ್ಲ. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಮಾದರಿಯಲ್ಲೇ ಸಿಇಟಿ ಪರೀಕ್ಷೆ ನಡೆಸಲಾಗುವುದು. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಪ್ರಾಧಿಕಾರ ಎಚ್ಚರಿಕೆ ನೀಡಿದೆ.
ಜೂನ್ 16, 17 ಮತ್ತು 18ರಂದು ನಡೆಯಲಿರುವ ಸಿಇಟಿಗೆ ಸಮವಸ್ತ್ರ ಪಾಲನೆಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪಿಎಸ್‍ಐ ಹಾಗೂ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ತೀರ್ಮಾನಿಸಲಾಗಿದೆ.
ನೀಟ್ ಪರೀಕ್ಷೆ ಮಾದರಿಯಲ್ಲೇ ಸಿಇಟಿ ನಡೆಸಲಾಗುವುದು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಂಗಲ್ಯ ಸರ, ಮೂಗುತಿ, ಓಲೆ, ಸರ, ಬಳೆ ಸೇರಿದಂತೆ ಯಾವುದೇ ರೀತಿಯ ಆಭರಣ ಧರಿಸಿ ಬರುವಂತಿಲ್ಲ. ವಾಚ್, ಕ್ಯಾಲ್ಕುಲೇಟರ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಮಾತ್ರವಲ್ಲ ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಮೆಟಲ್ ಡಿಟೆಕ್ಟರ್ಗಳನ್ನು ಅಳವಡಿಕೆ ಮಾಡಲಾಗುತ್ತಿದೆ.
ಪರೀಕ್ಷೆ ಬರೆಯಲಿರುವ 2.11 ಲಕ್ಷ ವಿದ್ಯಾರ್ಥಿಗಳು: ಒಟ್ಟು 2.11 ಲಕ್ಷ ವಿದ್ಯಾರ್ಥಿಗಳು ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 1.4 ಲಕ್ಷ ಪುರುಷರು ಹಾಗೂ 1.7 ಲಕ್ಷ ಮಹಿಳಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.