ನವದೆಹಲಿ(Newdelhi): ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ನಿಷೇಧಿಸಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿದ್ದು, ಸುಪ್ರೀಂ ಕೋರ್ಟ್’ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ನ್ಯಾಯಮೂರ್ತಿ ಹೇಮಂತ್ ಗುಪ್ತ ಅವರು ವಿದ್ಯಾರ್ಥಿನಿಯರ ಮೇಲ್ಮನವಿಗಳನ್ನು ತಿರಸ್ಕರಿಸಿದರು. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದರು. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯ ತಳೆದರು.
ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಸ್ತೃತ ಪೀಠ ರಚಿಸುವಂತೆ ನ್ಯಾಯಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಮಾಡಿತು.
ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸಿ ಅಂತಿಮ ತೀರ್ಪು ಹೊರಬರುವವರೆಗೆ ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ಜಾರಿಯಲ್ಲಿರಲಿದೆ.
10 ದಿನಗಳ ಕಾಲ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಸೆಪ್ಟೆಂಬರ್ 22ರಂದು ತೀರ್ಪನ್ನು ಕಾಯ್ದಿರಿಸಿತ್ತು. ಗುರುವಾರ ಬೆಳಿಗ್ಗೆ 10.30ಕ್ಕೆ ತೀರ್ಪನ್ನು ಪ್ರಕಟಿಸಿತು.
ಸರ್ಕಾರಿ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಎಲ್ಲಾ ವೈಯಕ್ತಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಾರ್ಚ್ 15ರಂದು ಸಾರಾಸಗಟಾಗಿ ತಿರಸ್ಕರಿಸಿದ್ದ ಹೈಕೋರ್ಟ್‌ನ ತ್ರಿಸದಸ್ಯ ಪೀಠ, ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ ಎಂಬ ಸಂಶಯ ವ್ಯಕ್ತಪಡಿಸಿತ್ತು.
ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು.
ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ 22 ಅರ್ಜಿದಾರರು, ವಿದ್ಯಾರ್ಥಿಗಳಿಗೆ ಕಡ್ಡಾಯವಾದ ಸಮವಸ್ತ್ರ ರೂಪಿಸಿ ಕರ್ನಾಟಕ ಸರ್ಕಾರ ಕಾಯ್ದೆ ಅಥವಾ ನಿಯಮ ಜಾರಿಗೊಳಿಸಿಲ್ಲ. ಹಾಗಾಗಿ, ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದು ಸರಿಯಲ್ಲ. ಹಿಜಾಬ್ ಧರಿಸುವುದನ್ನು ಸಂವಿಧಾನದ ಅಡಿ ಖಾತರಿಪಡಿಸಲಾದ ಗೋಪ್ಯತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಮೂಲಭೂತ ಹಕ್ಕುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಆದರೆ, ಅದನ್ನು ಅರಿಯದೇ ಹೈಕೋರ್ಟ್ ಪ್ರಮಾದವೆಸಗಿದೆ ಎಂದು ಆಕ್ಷೇಪಿಸಿದ್ದರು.