ಬಳ್ಳಾರಿ: ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಭೀಕರ ರಸ್ತೆ ಅಪಘಾತವು ನಾಲ್ಕು ಅಮೂಲ್ಯ ಜೀವಗಳನ್ನು ಬಲಿತೆಗೆದುಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈ ದುರ್ಘಟನೆ ಬಹುತೇಕ ಕ್ಷಣಾರ್ಧದಲ್ಲಿ ನಡೆದಿದೆ. ಜೈಸಿಂಗಪುರದ ಬಳಿ ಕಾರು ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ತತ್ತರಿಸಿದ ಸ್ಥಳೀಯರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಆದರೆ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಜೀವ ಕಳೆದುಕೊಂಡಿರುವುದು ದೃಢಪಟ್ಟಿದೆ.
ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ವೈದ್ಯಕೀಯ ಮೇಲ್ವಿಚಾರಣೆಯಲ್ಲಿರುವ ಗಾಯಾಳು ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ಲಭುತ್ತಿದ್ದಂತೆ ಸಂಡೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಯ ಶವಘಟಕಕ್ಕೆ ಸಾಗಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂಪೂರ್ಣ ಮಾಹಿತಿ ಹಾಗೂ ಕಾರಣ ನಿರ್ಧಾರಕ್ಕಾಗಿ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.















