ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಸೆಪ್ಟೆಂಬರ್ 13ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೇವನಹಳ್ಳಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 4 ರವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪನವರ ನೇತೃತ್ವದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸುವ ನಿರೀಕ್ಷೆ ಇದೆ.
ಈ ಉದ್ಯೋಗ ಮೇಳದಲ್ಲಿ 50 ಕ್ಕಿಂತ ಹೆಚ್ಚು ನಿಯೋಜಕರು ಕಂಪನಿಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಉತ್ಸುಕರಾಗಿದ್ದಾರೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಸ್ವ ವಿವರಗಳ ಜೊತೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಈ ಉದ್ಯೋಗ ಮೇಳದ ವಿಶೇಷವೇನೆಂದರೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.
ನೋಂದಣಿ ಮಾಡಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು http://bangalorerural.nic.in/en/job-fair/ ಲಿಂಕ್ ಅನ್ನು ಅಥವಾ ಈ QR ಕೋಡ್ ಅನ್ನು ಬಳಸಿಕೊಂಡು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಹತ್ತಿರದ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಪುರಸಭೆ ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದು.