ಬೆಂಗಳೂರು (Bengaluru)- ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಮಾಜಿ ಸಚಿವ ಹಾಗೂ ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ (Zameer Ahmed) ಸ್ಪಷ್ಟನೆ ನೀಡಿದ್ದಾರೆ.
ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾಗಿ ಬಂಧಿತರಾಗಿದ್ದ ಆರೋಪಿಗಳ ಕುಟುಂಬಕ್ಕೆ ಫುಡ್ ಕಿಟ್ ಹಾಗೂ ಧನ ಸಹಾಯ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದ್ದಾರೆ ಎಂಬ ಆರೋಪ ಜಮೀರ್ ವಿರುದ್ಧ ಕೇಳಿಬಂದಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್, ನಾನು ಮೆಕ್ಕಾದಲ್ಲಿದ್ದೇನೆ, ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ 17ನೇ ತಾರೀಖಿನಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮಕ್ಕಾಗೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ. ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಎಂದಿದ್ದಾರೆ.
ಆರೋಪದ ವಿಚಾರವಾಗಿ ಸಚಿವ ಡಾ. ಅಶ್ವತ್ಥ ನಾರಾಯಣ, ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಟೀಕಿಸಿದ್ದರು.
ಈ ವಿಚಾರವಾಗಿ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಸಚಿವ ಡಾ. ಅಶ್ವತ್ಥ ನಾರಾಯಣ, ಗಲಭೆ ಪ್ರಕರಣದ ಆರೋಪಿಗಳ ಕುಟುಂಬಗಳಿಗೆ ಜಮೀರ್ ಸಹಾಯ ನೀಡುವ ಮೂಲಕ ರಾಜಕೀಯ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ಸಂಪೂರ್ಣವಾಗಿ ಖಂಡಿಸಬೇಕಿತ್ತು. ಆದರೆ ಪ್ರೋತ್ಸಾಹ ಕೊಡುತ್ತಿದ್ದಾರೆ. ಇದು ಖಂಡನೀಯ ಎಂದಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಜಮೀರ್ ನಡೆಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.