ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ಉಪಜಾತಿಗಳ ಒಳ ಮೀಸಲಾತಿ ವರ್ಗೀಕರಣ ಪ್ರಕ್ರಿಯೆ ತ್ವರಿತವಾಗಿ ಮುಗಿಸಲು ಹೊಸದಾಗಿ ಸಮೀಕ್ಷೆ ಕೈಗೊಂಡು ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಸಮಿತಿಯನ್ನೇ ಮತ್ತೆರಡು ತಿಂಗಳು ಮುಂದುವರಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿದ ಒಳ ಮೀಸಲಾತಿ ವರ್ಗೀಕರಣ ಕುರಿತ ಮಧ್ಯಂತರ ವರದಿಯನ್ನು ಸಂಪುಟ ಸಭೆ ಅಂಗೀಕರಿಸಿದ್ದು, 60ದಿನಗಳೊಳಗೆ ಹೊಸ ಸಮೀಕ್ಷೆ ಪೂರ್ಣಗೊಳಿಸಲು ವರದಿ ನೀಡುವಂತೆ ಕೋರಲು ನಿರ್ಧರಿಸಿದೆ.
ರಾಜ್ಯದಲ್ಲಿ 6 ಸಾವಿರಕ್ಕೂ ಅಧಿಕ ಪಂಚಾಯ್ತಿಗಳು, 200ಕ್ಕೂ ಹೆಚ್ಚು ನಗರಸಭೆ, ಪುರಸಭೆಗಳಿವೆ. ಈ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳ ಕುರಿತು ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ನಾಗಮೋಹನದಾಸ್ ನೇತೃತ್ವದ ಸಮಿತಿ ನೀಡಬೇಕು. ಗುರುವಾರ ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದು, ಅಗತ್ಯ ಮಾಹಿತಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ವಿವರಿಸಿದರು.
ಕರಾರುವಕ್ಕಾದ ದತ್ತಾಂಶ ಸಂಗ್ರಹವಾದರೆ ಒಳಮೀಸಲಾತಿ ವರ್ಗೀಕರಣ ಸುಲಭವಾಗಲಿದೆ. ಇಲ್ಲವಾದಲ್ಲಿ ನ್ಯಾಯಾಲಯದ ಕಟಕಟೆ ಏರಿ ಅನಗತ್ಯ ವಿಳಂಬವಾಗುವ ಸಾಧ್ಯತೆಯೇ ಹೆಚ್ಚಿದೆ. ಅಂತಹ ಯಾವುದೇ ಸಮಸ್ಯೆಗೆ ಸಿಲುಕದಂತೆ ಒಳ ಮೀಸಲಾತಿ ಜಾರಿ ಮಾಡುವುದು ಸರ್ಕಾರದ ಉದ್ದೇಶವಾಗಿದೆ. 2011ರ ಜಾತಿಗಣತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ ಹಾಗೂ ಆದಿ ಆಂಧ್ರ ಉಪಜಾತಿಗಳ ಮಾಹಿತಿ ಇಲ್ಲ. ಅದಕ್ಕಾಗಿ ಹೊಸ ಸಮೀಕ್ಷೆ ಅಗತ್ಯವಾಗಿದೆ ಎಂದು ಹೇಳಿದರು.
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮೂರು ದಶಕಗಳಿಂದ ನಿರಂತರ ಹೋರಾಟ ನಡೆಸಿದರೂ ಸದಾಶಿವ ಆಯೋಗದ ವರದಿ ಜಾರಿಯಾಗಿರಲಿಲ್ಲ. ಒಳ ಮೀಸಲಾತಿಗೆ ಸಂಬಂಧಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯಾವುದೇ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಿರಲಿಲ್ಲ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ ಮೀಸಲಾತಿ ವರ್ಗೀಕರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಜಾರಿ ಸನ್ನಿಹಿತವಾಗಿದೆ ಎನ್ನಲಾಗಿದೆ.