ಬೆಂಗಳೂರು: ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದು ಗುರುವಾರದಿಂದ ಆರಂಭವಾಗಲಿದೆ.
ಸಿಸಿಬಿ ಕಚೇರಿ ಮುಂದೆ ಪೊಲೀಸ್ ವಾಹನದಿಂದ ಕೆಳಗೆ ಇಳಿಯುತ್ತಿದ್ದಂತೆ ಮಾಧ್ಯಮಗಳ ಮುಂದೆ ಮಾತನಾಡಿದ ಚೈತ್ರಾ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲುಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀ ಸ್ವಾಮೀಜಿ ಕೂಡ ಈ ಪ್ರಕರಣದಲ್ಲಿ ಇದ್ದು, ಎ3 ಆರೋಪಿಯಾಗಿದ್ದಾರೆ. ಆದರೆ, ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸಿಸಿಬಿ ಪೊಲೀಸರು ಸಹ ಸ್ವಾಮೀಜಿ ಬಂಧನಕ್ಕೆ ಬಲೆ ಬೀಸಿದ್ದು, ಅವರು ಸಿಕ್ಕ ಬಳಿಕ ಈ ಪ್ರಕರಣ ಮತ್ತಷ್ಟು ಸ್ಫೋಟಕ ಅಂಶಗಳು ಬಯಲಾಗಲಿವೆ.
ಸದ್ಯ 10 ದಿನಗಳ ಕಾಲ ಚೈತ್ರಾ ಅವರನ್ನು ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಎಸಿಪಿ ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ.