ಮೈಸೂರು(Mysuru): ಜಿಲ್ಲೆಯಲ್ಲಿ ಅನಾಥ ಮಕ್ಕಳು ಇದ್ದು, ಅದೇ ರೀತಿ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ತುಂಬಾ ಜನ ಪೋಷಕರು ಇರುತ್ತಾರೆ. ಅನಾಥ ಮಕ್ಕಳ ದತ್ತು ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿ ಅನಾಥ ಮಕ್ಕಳಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ತಿಳಿಸಿದರು.
ತಮ್ಮ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೂಕ್ಷ್ಮವಾದ ಘಟಕ. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಗುರುತರವಾದ ಜವಾಬ್ದಾರಿ ಹೊಂದಿದೆ. ಹೆಚ್ ಐ ವಿ ಪೀಡಿತ ತಂದೆ ತಾಯಿಗಳಿಂದ ಮಕ್ಕಳಿಗೆ ಬರುವ ಸಾಧ್ಯತೆ ಇದ್ದು ಅಂತಹ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ನೀಡುವ ಜೊತೆಗೆ, ಪ್ರತಿ ತಿಂಗಳು ನೀಡುವ 1000 ಪ್ರೋತ್ಸಾಹ ಧನ ನೀಡಬೇಕು. ಯಾರಾದರೂ ಮರಣ ಹೊಂದಿದ್ದರೆ ಅವರನ್ನು ಪಟ್ಟಿಯಿಂದ ಕೈಬಿಡಬೇಕು ಎಂದರು.
ಬಾಲ್ಯ ವಿವಾಹ ಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ, ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಬಾಲ್ಯ ವಿವಾಹ ಗಳು ನಡೆಯುತ್ತವೆ. ಯಾವುದೇ ಮಗು ಶಾಲೆ ಕಾಲೇಜನ್ನು ಬಿಟ್ಟರೆ ಅಂಥವರ ಬಗ್ಗೆ ಅಧ್ಯಯನ ಮಾಡಿದರೆ, ಇನ್ನೂ ಪರಿಣಾಮಕಾರಿಯಾಗಿ ಬಾಲ್ಯ ವಿವಾಹಗಳನ್ನು ತಡೆಯಬಹುದು. ಅಲ್ಲದೆ ಆ ಊರಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಆಶಾ ಕಾರ್ಯಕರ್ತೆಯರ ಗಮನಕ್ಕೆ ಬರದೇ ಯಾವುದೇ ಬಾಲ್ಯ ವಿವಾಹಗಳು ನಡೆಯುವುದಿಲ್ಲ, ಇವರಿಂದ ಮಾಹಿತಿ ಪಡೆದುಕೊಳ್ಳಿ. ಬಾಲ್ಯ ವಿವಾಹದ ಅಪರಾಧಿಗಳಿಗೆ ಶಿಕ್ಷೆ ಆಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 699 ಮಕ್ಕಳು ಶಾಲೆಯಿಂದ ಹೊರಗಿದ್ದು, ಶಾಲೆ ಬಿಟ್ಟ ಮಕ್ಕಳ ಪೋಷಕರನ್ನು ಮನವೊಲಿಸಿ ಅಂತಹ ಮಕ್ಕಳನ್ನು ಪುನಃ ಶಾಲೆಗೆ ಕರೆದುಕೊಂಡು ಬನ್ನಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಬಾಲ್ಯದ ಜೀವನದ ಕ್ಷಣಗಳನ್ನು ಅನುಭವಿಸಲು ಅವಕಾಶ ಕಲ್ಪಿಸಬೇಕು. ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಬೇಕು ಎಂದರು.
2023 ರಲ್ಲಿ ಮೈಸೂರನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಮುಂದಿನ 3 ತಿಂಗಳಲ್ಲಿ ಕನಿಷ್ಟ 150 ಬಾಲ ಕಾರ್ಮಿಕರನ್ನು ಗುರುತಿಸಿ ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಪ್ರವಾಸಿ ತಾಣವಾಗಿದ್ದು, ಇಲ್ಲಿ ಭಿಕ್ಷಾಟನೆ ಹೆಚ್ಚಿದ್ದು, ಭಿಕ್ಷಾಟನೆ ಮಾಡುವ ಮಕ್ಕಳನ್ನು ಗುರುತಿಸಿ ಕೌನ್ಸಿಲಿಂಗ್ ಮಾಡಿ ಭಿಕ್ಷಾಟನೆ ಬಿಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವರಾಜ ಭೂತೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಾಯತ್ರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಳಾದ ಬಸವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಪ್ರಸಾದ್ ಸೇರಿದಂತೆ ಜಿಲ್ಲೆಯ ಸಿ. ಡಿ. ಪಿ. ಒ. ಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.