ಮನೆ ರಾಜಕೀಯ ಐದು ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟದಲ್ಲಿ ತಾತ್ವಿಕ ಅನುಮೋದನೆ: ಸಿದ್ದರಾಮಯ್ಯ

ಐದು ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟದಲ್ಲಿ ತಾತ್ವಿಕ ಅನುಮೋದನೆ: ಸಿದ್ದರಾಮಯ್ಯ

0

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳಿಗೆ ನೂತನ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ಪಡೆಯಲಾಗಿದೆ.

Join Our Whatsapp Group

ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು..

ಐದು ಗ್ಯಾರಂಟಿಗಳ ಹೆಚ್ಚಿನ ವಿವರಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುವುದು. ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂ. ನೀಡಲಾಗುವುದು. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಪ್ರಣಾಳಿಕೆಯಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದೆವು. ಆದರೆ, ಇವುಗಳು ಕೇವಲ ಒಂದು ವರ್ಷದಲ್ಲಿ ಈಡೇರಿಸುವ ಭರವಸೆಗಳಲ್ಲ. ಇವುಗಳ ಜತೆಗೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿ ಜಾರಿ ಬಗ್ಗೆ ಹೇಳಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರದ ವಿರುದ್ಧ ವಾಗ್ದಾಳಿ

5 ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್​ ಗಾತ್ರ 3.10 ಲಕ್ಷ ಕೋಟಿ ರೂ. ಇದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.

ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಎಸ್ ​ಟಿ ಕೌನ್ಸಿಲ್ ಸದಸ್ಯರಾಗಿದ್ದರು. ಆದರೂ ಪ್ರಯೋಜನವಾಗಲಿಲ್ಲ. ಕೇಂದ್ರ ಸರ್ಕಾರ ನಮ್ಮ ತೆರಿಗೆಯನ್ನೇ ವಾಪಸ್ ಕೊಡೋದು. 5 ಗ್ಯಾರಂಟಿ ಯೋಜನೆಯಾದ್ರೆ ರಾಜ್ಯ ದಿವಾಳಿ ಆಗುತ್ತೆ ಅಂತ ಬಿಜೆಪಿಯವರು ಹೇಳುತ್ತಾರೆ. ದೇಶವನ್ನು ಸಾಲಗಾರ ಮಾಡಿದ್ದು ಯಾರು? ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕೇವಲ ಬರೀ 53 ಲಕ್ಷ ಕೋಟಿ ರೂ. ಸಾಲ ಇತ್ತು. ಈಗ 155 ಲಕ್ಷ ಕೋಟಿ ರೂಪಾಯಿ ದೇಶದ ಮೇಲೆ ಸಾಲ ಇದೆ. ಈಗ ರಾಜ್ಯದ ಸಾಲ 3 ಲಕ್ಷದ 22 ಸಾವಿರ ಕೋಟಿ ರೂ. ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಹಿಂದಿನ ಲೇಖನಕನ್ನಡ ನಾಡಿನ ಜನಹಿತಕ್ಕಾಗಿ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬೆಂಬಲ: ಹೆಚ್.ಡಿ.ಕುಮಾರಸ್ವಾಮಿ
ಮುಂದಿನ ಲೇಖನಮನೆಯಲ್ಲಿ ಕಿರಿಕಿರಿ ಮಾಡುವ ಅತ್ತೆಯನ್ನು ನಿಭಾಯಿಸುವುದೂ ಒಂದು ಕಲೆ!!