ಚಿಕ್ಕಬಳ್ಳಾಪುರ: ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ ಡಾ ಕೆ.ಸುಧಾಕರ್ ಜನರ ಗಮನ ಸೆಳೆದಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಕ್ಷೇತ್ರದಾದ್ಯಂತ ಓಡಾಡುತ್ತಿದ್ದು, ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹುರುಪಿನಿಂದ ಕೆಲಸ ಮಾಡುವಂತೆ ಹುರಿದುಂಬಿಸುತ್ತಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ಇದರಿಂದ ಕಾರ್ಯಕರ್ತರ ಉತ್ಸಾಹ ಇನ್ನಷ್ಟು ಹೆಚ್ಚಾಗಿದೆ.
ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಿದ ವಿಜಯ ಸಂಕಲ್ಪ ಸಮಾವೇಶ ಹಾಗೂ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಪಾಲ್ಗೊಂಡ ಅಭ್ಯರ್ಥಿ ಡಾ.ಕೆ.ಸುಧಾಕರ್, ದಲಿತರು ಹಾಗೂ ಹಿಂದುಳಿದವರಿಗೆ ಕಾಂಗ್ರೆಸ್ ಮಾಡುತ್ತಿರುವ ಅನ್ಯಾಯವನ್ನು ವಿವರಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ಈ ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳೇ ಆಧಾರ. ಆದರೆ ಈ ತಾತ್ಕಾಲಿಕ ಗ್ಯಾರಂಟಿಗಳು ಜನರ ಭವಿಷ್ಯ ಮತ್ತು ಬದುಕು ಕಟ್ಟಿಕೊಡುವ ಕೆಲಸ ಮಾಡುವುದಿಲ್ಲ. ಮೋದಿ ಸರ್ಕಾರ ಕೊಡುವ ಸರ್ಕಾರವಾಗಿದ್ದರೆ, ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುವ ಸರ್ಕಾರವಾಗಿದೆ ಎಂದು ಹೇಳಿದರು.