ಅಹಮದಾಬಾದ್: ಐಪಿಎಲ್ 2026 ಫೈನಲ್ ಪಂದ್ಯದಲ್ಲಿ ಜಯ ಸಾಧಿಸಿ ಟ್ರೋಫಿ ಗೆದ್ದ ಬಳಿಕ ಆರ್ ಸಿಬಿ ತಂಡದ ಆಟಗಾರರು ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದರು. ಈ ಸಂಭ್ರಮದ ನಡುವೆ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಜೊತೆಯಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ರಜತ್ ಪಟಿದಾರ್ ನೇತೃತ್ವದ ಆರ್ ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಐದು ವಿಕೆಟ್ ಗಳ ಅಂತರದ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತಂಡ ಸತತ ಎರಡನೇ ಬಾರಿ ಐಪಿಎಲ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 75 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ತಂಡ 156 ರನ್ ಗಳ ಗುರಿಯನ್ನು ಕೇವಲ 18 ಓವರ್ ಗಳಲ್ಲಿ ತಲುಪಿತು.
ಗೆಲುವಿನ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಉತ್ಸಾಹದಿಂದ ಹೆಜ್ಜೆ ಹಾಕಿದರು. ಈ ವೇಳೆ ದಿನೇಶ್ ಕಾರ್ತಿಕ್ ಸೇರಿದಂತೆ ಹಲವು ಆಟಗಾರರು ಸಹ ಸಂಭ್ರಮದಲ್ಲಿ ಭಾಗಿಯಾದರು.
ಆರ್ ಸಿಬಿ ತಂಡವು ಈ ವಿಶೇಷ ಕ್ಷಣಗಳ ವಿಡಿಯೋವನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ಇತರ ಆಟಗಾರರು ಸಂತೋಷದಿಂದ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಕಂಡು ಬಂದಿವೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಲವರು ಕಾಮೆಂಟ್ ಗಳ ಮೂಲಕ ತಮ್ಮ ಸಂತಸವನ್ನು ಹಂಚಿಕೊಳ್ಳುತ್ತಿದ್ದು, ವಿಡಿಯೋಗೆ ಸಾವಿರಾರು ಪ್ರತಿಕ್ರಿಯೆಗಳು ಲಭಿಸಿವೆ.

















