ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿ ಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯೋಜನೆಯ ಬಗ್ಗೆ ಶ್ಲಾಘಿಸಿದರು.
ಮಕ್ಕಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಯೋಜನೆ ಬಹಳ ವಿಶೇಷ ವಾಗಿದೆ. ಸಣ್ಣ ವಯಸ್ಸಿನಲ್ಲೇ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಬೆಳೆಸುವುದರಿಂದ ಮಕ್ಕಳಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿವು ಮೂಡಿಸಬಹುದಾಗಿದೆ. ಇಂತಹ ಯೋಜನೆಯನ್ನು ಯೋಜಿಸಿ ಅನುಷ್ಟಾನಗೊಳಿಸುತ್ತಿರುವ ಸರಕಾರದ ಕ್ರಮ ಅನುಕರಣೀಯ. ಈ ಯೋಜನೆಯಿಂದ ಭವಿಷ್ಯದ ವೈಜ್ಞಾನಿಕ ಕ್ಷೇತ್ರದಲ್ಲಿ ನಮ್ಮ ಮಕ್ಕಳ ಕೊಡುಗೆಯೂ ಹೆಚ್ಚಲಿದೆ ಎಂದರು.
ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಮಾತನಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ಸರಕಾರ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಯನ್ನು ಹೆಚ್ಚಿಸಲು ಹೆಚ್ಚಿನ ಆದ್ಯತೆ ನೀಡುತ್ತಿದೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೊಪ್ ನೀಡುವ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಎಲ್ಲಾ ಮಕ್ಕಳು ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು, ಹಾಗೆಯೇ ಆ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡಬೇಕು ಎನ್ನುವ ಉದ್ದೇಶ ಹೊಂದಿದ್ದೇವೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಚಿವರ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಎರಡು ವಸತಿ ಶಾಲೆಗಳಿಗೆ ಟೆಲಿಸ್ಕೊಪ್ ನೀಡಲಾಯಿತು.