ಬೆಂಗಳೂರು(Bengaluru): ನಗರದ ಸದ್ಯದ ಸ್ಥಿತಿ ಮತ್ತು ಪ್ರವಾಹ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದರು.
ಪಕ್ಷದ ನಾಯಕರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬೆಂಗಳೂರು ನಗರ ಹಿಂದೆಂದೂ ಕಾಣದಂತಹ ಸಮಸ್ಯೆಗೆ ಸಿಲುಕಿದೆ. ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಸರ್ಕಾರ ಏನು ಮಾಡಿದೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಬೆಂಗಳೂರಿನ ದುಸ್ಥಿತಿಗೆ ಬಿಜೆಪಿ ಸರ್ಕಾರವೇ ಕಾರಣ. ಈಗ ತಪ್ಪು ಮುಚ್ಚಿಕೊಳ್ಳಲು ಕಾಂಗ್ರೆಸ್ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ದೂರಿದರು.
ನಗರದ ವ್ಯಾಪ್ತಿಯ ಮೂವರು ಸಂಸದರು ಬಿಜೆಪಿಯವರೇ ಇದ್ದಾರೆ. ಪ್ರವಾಹದಿಂದ ತೊಂದರೆ ಆಗಿರುವ ಪ್ರದೇಶಗಳಲ್ಲಿ ದೀರ್ಘ ಕಾಲದಿಂದ ಬಿಜೆಪಿ ಶಾಸಕರೇ ಇದ್ದಾರೆ. ಅವರು ಸರಿಯಾಗಿ ಕೆಲಸ ಮಾಡದೆ ಇರುವುದೇ ಈ ಸಮಸ್ಯೆಗೆ ಕಾರಣ ಎಂದರು.
ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರ, ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯದಿಂದ ನಗರದ ಜನರಿಗೆ ಹಾನಿಯಾಗಿದೆ. ಇದರ ವಿರುದ್ಧ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಶಾಸಕ ಕೆ.ಜೆ. ಜಾರ್ಜ್, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪತ್ರಿಕಾಗೋಷ್ಠಿಯಲ್ಲಿದ್ದರು.