ಮನೆ ರಾಜ್ಯ ಪೊಲೀಸರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲು ತೀರ್ಮಾನಿಸಿ ಇಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ನಿಂದ ಈ ವರ್ಷದ ಆಗಸ್ಟ್ ವರೆಗೆ 16 ಜನ  ಹಾಗೂ ದೇಶದಲ್ಲಿ 180 ಜನ ರಕ್ಷಣಾ ಸಿಬ್ಬಂದಿ ಹುತ್ಮಾತರಾಗಿದ್ದು, ಅವರೆಲ್ಲರನ್ನು ಸ್ಮರಿಸಿ ನಮನ ಸಲ್ಲಿಸಲಾಗಿದೆ. ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ತಿಳಿಸಿದರು.

ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು‌ ಕರೆ ನೀಡಿದರು.

ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು.

ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.

ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.