ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಸಹಾಯಕ ಸುನಿಲ್ ಶ್ರೀವಾಸ್ತವ ಸೇರಿದಂತೆ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಇತರ ನಾಯಕರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾಂಚಿ ಮತ್ತು ಜಮ್ಶೆಡ್‌ಪುರ ಸೇರಿದಂತೆ ಇತರೆ 9 ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಜೆಎಂಎಂ ಪಕ್ಷದ ನಾಯಕರ ಮನೆಗಳು ಮತ್ತು ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 23ರಂದು ಫಲಿತಾಂಶ ಪ್ರಕಟವಾಗಲಿದೆ.