ಬೆಂಗಳೂರು(Bengaluru): ಸಂವಿಧಾನದ 371ನೇ (ಜೆ) ಕಲಂನ ಮೀಸಲಾತಿಯಡಿ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ ಎಂದಿದ್ದ ಬಿಜೆಪಿ ಮಾತು ಮರೆತಿದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರಿ ಹುದ್ದೆಗಳನ್ನು ಮಾರಾಟ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ (ಬಿಜೆಪಿಗೆ) ತಮ್ಮ ಮಾತು ನೆನಪಾಗುವುದಾದರೂ ಹೇಗೆ ? ಭರ್ತಿಯಾಗುತ್ತಿರುವುದು ಹುದ್ದೆಗಳಲ್ಲ ಬಿಜೆಪಿಗರ ಜೇಬು ಮಾತ್ರ ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ಕಿಡಿ:
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿಂದಿನ ಸರ್ಕಾರ ಮಂಡಳಿಗೆ ಹಣ ಘೋಷಣೆ ಮಾಡಿತ್ತು. ಆದರೆ ಬಿಡುಗಡೆ ಮಾಡಿರಲಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರವಾಗಿದ್ದು, ಘೋಷಿತ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದರು.















