ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಣಕ್ಕಿಳಿಯಲಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಬಿ-ಫಾರ್ಮ್ ವಿತರಿಸಲಾಯಿತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ-ಫಾರ್ಮ್ ವಿತರಿಸಿದರು.
ಶೆಟ್ಟರ್ ಅವರು ಬಿಜೆಪಿಯಿಂದ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರವನ್ನು ದೀರ್ಘ ಕಾಲದಿಂದ ಪ್ರತಿನಿಧಿಸುತ್ತಿದ್ದರು. ಸೋಮವಾರ ಬೆಳಿಗ್ಗೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಈ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿತ್ತು.