ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು ಮಧ್ಯಾಹ್ನ 12 ಗಂಟೆ ವೇಳೆಗೆ ಶೇ. 32 ರಷ್ಟು ಮತದಾನವಾಗಿದೆ.
ಮೊದಲ ಹಂತದ 24ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದು ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಪ್ಯಾರಾಮಿಲಿಟರಿ ಪಡೆಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಅಲ್ಲಲ್ಲಿ ಸಣ್ಣಪುಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಚುನಾವಣೆ ಅಧಿಕಾರಿಗಳು ಹೇಳಿದ್ದಾರೆ.
ಬೆಳಗ್ಗೆ 9 ಗಂಟೆಯ ವೇಳೆಗೆ ಶೇ.11ರಷ್ಟು, 11 ಗಂಟೆಯ ವೇಳೆಗೆ ಶೇ. 26ರಷ್ಟು, ಮಧ್ಯಾಹ್ನ 12 ಗಂಟೆ ವೇಳೆಗೆ ಶೇ. 32ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 7.14 ಲಕ್ಷಕ್ಕೂ ಹೆಚ್ಚು ಮತದಾರರು ಮತದಾನ ಮಾಡಲಿದ್ದಾರೆ.
ಒಂದು ದಶಕದ ಅವಧಿಯಲ್ಲಿ ಇಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು. ಕಣಿವೆ ರಾಜ್ಯಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನ ವನ್ನು ಕೇಂದ್ರ ಸರ್ಕಾರವು 2019ರ ಆಗಸ್ಟ್‌ನಲ್ಲಿ ಹಿಂಪಡೆದು, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು.