ನವದೆಹಲಿ(New Delhi): ಟ್ವೀಟ್‌ವೊಂದರ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪಗಳ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಫ್ಯಾಕ್ಟ್ ಚೆಕಿಂಗ್ ವೆಬ್‌ಸೈಟ್ ‘ಆಲ್ಟ್ ನ್ಯೂಸ್’ ಸಹ ಸಂಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ಜುಬೇರ್ ವಿರುದ್ಧ ಐಪಿಸಿ ಸೆಕ್ಷನ್ 153ಎ (ಧಾರ್ಮಿಕ, ಜನಾಂಗೀಯ, ಹುಟ್ಟಿದ ಸ್ಥಳ, ಭಾಷೆಯ ಹಿನ್ನೆಯಲ್ಲಿ ಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು) ಹಾಗೂ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯ) ಅಡಿಯಲ್ಲಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಾಗಿರುವುದಾಗಿ ಸೈಬರ್ ಸೆಲ್ ಡಿಸಿಪಿ ಕೆ.ಪಿ.ಎಸ್.ಮಲ್ಹೋತ್ರಾ ಹೇಳಿದ್ದಾರೆ.
ಜುಬೇರ್ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗಿದ್ದು, ಒಂದು ದಿನ ಪೊಲೀಸ್ ವಶಕ್ಕೆ ನೀಡಿದ್ದಾರೆ.
ಅವರ ಬಂಧನವನ್ನು ವಿರೋಧಿಸಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ಹಲವು ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.