ಮೈಸೂರು(Mysuru): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ ‘ಕಲಾವೈಭವ’ ಜಿಲ್ಲಾ ಮಟ್ಟದ ಗುಡಿ ಕೈಗಾರಿಕೆಗಳ ಕರಕುಶಲ, ಕೈಮಗ್ಗ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಇಂದು ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ದಿನೇಶ್ ಉದ್ಘಾಟಿಸಿದರು.
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಆ.21ರವರೆಗೆ ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ಮೇಳ ನಡೆಯಲಿದೆ.
ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಅಭಿವೃದ್ಧಿ ವಿಭಾಗದ ನಿರ್ದೇಶಕ ರೇವಣ್ಣ ಸ್ವಾಮಿ, ಶಾಲಾ ಶಿಕ್ಷಣ ವಿಭಾಗದ ನಿರ್ದೇಶಕ ಬಿ.ಎ.ರಾಜಶೇಖರ, ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ಜಂಟಿ ನಿರ್ದೇಶಕ ಡಾ.ಎಚ್.ಆರ್.ಮಹದೇವಸ್ವಾಮಿ, ಕರಕುಶಲ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಕೆ.ಎಸ್.ಸುನಿಲ್‌ಕುಮಾರ್ ಭಾಗವಹಿಸಿದ್ದರು.
ಸ್ವಸಹಾಯ ಸಂಘಗಳು ಹಾಗೂ ಸ್ತ್ರೀಶಕ್ತಿ ಸಂಘದವರು ತಯಾರಿಸಿದ ಉತ್ಪನ್ನಗಳಿಗೆ ಮೇಳದಲ್ಲಿ ಮಾರುಕಟ್ಟೆ ಕಲ್ಪಿಸಲಾಗಿದೆ. ಕೈಗಾರಿಕೆಗಳು, ಸಣ್ಣ ಕೈಗಾರಿಕೆಗಳು, ಸ್ವಸಹಾಯ ಗುಂಪುಗಳು, ಖಾದಿ ಗ್ರಾಮೋದ್ಯೋಗ ಸಂಸ್ಥೆಯವರು, ಸ್ವಯಂ ಉದ್ಯೋಗಿಗಳು, ಕರಕುಶಲಕರ್ಮಿಗಳು, ಕೈಮಗ್ಗ ನೇಕಾರರ ಸಹಕಾರ ಸಂಘಗಳ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ 70 ಮಳಿಗೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.