ನವದೆಹಲಿ: ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 91ನೇ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶನಿವಾರ ಗೌರವ ನಮನ ಸಲ್ಲಿಸಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.
ಪ್ರಧಾನಿ ಮೋದಿ ಟ್ವೀಟ್ ಮಾಡಿ, ಕಲಾಂ ಅವರು ರಾಷ್ಟ್ರಪತಿಯಾಗಿ, ವಿಜ್ಞಾನಿಯಾಗಿ ದೇಶಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಅವರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಜೀವನ ಪಯಣ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದೆ ಎಂದು ಹೇಳಿದ್ದಾರೆ.
ಭಾರತದ ಮಾಜಿ ರಾಷ್ಟ್ರಪತಿಗಳು ಹಾಗೂ ಭಾರತದ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ವ್ಯಕ್ತಿತ್ವ, ಸಾಧನೆ ಮತ್ತು ಅವರು ಈ ದೇಶಕ್ಕೆ ನೀಡಿದ ಕೊಡುಗೆಗಳು ನಮ್ಮೆಲ್ಲರಿಗೂ ಪ್ರೇರಣೆಯಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿಗಳು, ನಮ್ಮ ದೇಶದ ಕ್ಷಿಪಣಿ ಪಿತಾಮಹರು ಹಾಗೂ ಜಗತ್ತು ಕಂಡ ಸರ್ವಶ್ರೇಷ್ಠ ಕ್ಷಿಪಣಿ ವಿಜ್ಞಾನಿಗಳೂ ಆಗಿದ್ದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. ‘ಜನರ ರಾಷ್ಟ್ರಪತಿ’ಗಳಾಗಿದ್ದ ಕಲಾಂ ಅವರು ಸದಾ ಸ್ಮರಣೀಯರು’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.