ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಿಬ್ಬಂದಿ ನೇಮಕ, ವರ್ಗಾವಣೆ ಹಾಗೂ ಪದನಾಮ ಬದಲಾವಣೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆಂಬ ಆರೋಪ ಸಂಬಂಧ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಸದನ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಕಾಯಂ ನೌಕರರು ಕುಲಸಚಿವರ ಕಚೇರಿಯ ಬಾಗಿಲಿಗೆ ಹಣದ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಕುಲಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮಾ. ೧೮ರಂದು ಪ್ರತಿಭಟನೆ ನಡೆಸಿರುವುದು ಮಾಧ್ಯಮ ಹಾಗೂ ಸುದ್ದಿ ಪತ್ರಿಕೆಗಳಲ್ಲಿ ಬಿತ್ತರವಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ವಿಶ್ವವಿದ್ಯಾನಿಲಯದ ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಉಪಾಧ್ಯಕ್ಷ ಡಾ.ಎನ್.ಆರ್. ನಿರಂಜನ್ ಅವರು ಖುದ್ದು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚರ್ಚಿಸಿ ಸಮಗ್ರ ಮಾಹಿತಿ ಸಂಗ್ರಹಿಸಿ ಸದರಿ ಪ್ರಕರಣದ ಕುರಿತು ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿಯನ್ನು ಪಡೆದ ನಂತರ ನಿಯಮಾನುಸಾರ ಪರಿಶೀಲಿಸಿ ಇಲಾಖೆಯ ಹಂತದಲ್ಲಿ ಅಗತ್ಯ ಕ್ರಮಹಿಸಲಾಗುವುದು ಎಂದು ಉತ್ತರಿಸಿದ್ದಾರೆ.