ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್, ಎಎಪಿ, ಕೆಆರ್ ಪಿಪಿ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ.
ಈ ನಡುವೆ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.
ಹೀಗಾಗಿ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ. ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.















