ಬೆಂಗಳೂರು (Bengaluru): ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಜೂ.15 ರಂದು ಮತ ಎಣಿಕೆ ನಡೆಯಲಿದೆ.
ವಿಧಾನ ಪರಿಷತ್‌ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ರಾಜ್ಯದ 11 ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಚುನಾವಣೆ ನಡೆಯುತ್ತಿದೆ.
ಮೈಸೂರು, ಮಂಡ್ಯ, ಹಾಸನ ಮತ್ತುಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಮೈ.ವಿ. ರವಿಶಂಕರ್, ಜೆಡಿಎಸ್‌ನ ಎಚ್.ಕೆ. ರಾಮು, ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ, ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಪಕ್ಷೇತರ ಪ್ರಸನ್ನ ಎನ್. ಗೌಡ ಸೇರಿದಂತೆ 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ 150 ಮತಗಟ್ಟೆಗಳನ್ನು ತೆರೆದಿದ್ದು, 1.41 ಲಕ್ಷ ಮತದಾರರಿದ್ದಾರೆ.
ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಬಸವರಾಜ ಹೊರಟ್ಟಿ, ಕಾಂಗ್ರೆಸ್‌ನ ಬಸವರಾಜ ಗುರಿಕಾರ, ಜೆಡಿಎಸ್‌ನ ಶ್ರೀಶೈಲ ಗಡದಿನ್ನಿ ಸೇರಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ. 17,973 ಶಿಕ್ಷಕರು ಈ ಕ್ಷೇತ್ರದ ಮತದಾರರಿದ್ದಾರೆ.
ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ, ಕಾಂಗ್ರೆಸ್‌ನ ಸುನೀಲ ಸಂಕ ಸೇರಿದಂತೆ 11 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. 99,597 ಮತದಾರರಿದ್ದಾರೆ.
ಇದೇ ಜಿಲ್ಲೆಗಳ ವ್ಯಾಪ್ತಿಯ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಅರುಣ ಶಹಾಪುರ, ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ, ಜೆಡಿಎಸ್‌ನ ಚಂದ್ರಶೇಖರ ಲೋಣಿ, ಪಕ್ಷೇತರರಾದ ಎನ್.ಬಿ. ಬನ್ನೂರ ಸೇರಿದಂತೆ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 25,388 ಮತದಾರರು ಈ ಕ್ಷೇತ್ರದಲ್ಲಿದ್ದಾರೆ.
ಮತಗಟ್ಟೆ ಸಿಬ್ಬಂದಿ ಭಾನುವಾರ ಸಂಜೆಯೇ ನಿಗದಿತ ಸ್ಥಳ ತಲುಪಿದ್ದಾರೆ. ಕೋವಿಡ್ ಸೋಂಕಿತರಿಗೂ ಮತದಾನಕ್ಕೆ ಅವಕಾಶ ಕಲ್ಪಿಸುವುದಕ್ಕಾಗಿ ಪ್ರತಿ ಮತಗಟ್ಟೆಗೂ ಪಿಪಿಇ ಕಿಟ್ ಒದಗಿಸಲಾಗಿದೆ.
ಮತಗಟ್ಟೆಗಳ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.