ಮೈಸೂರು: ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಬೇಕು. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸದಂತೆ ಪ್ರತಿಯೊಂದು ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾ ವಹಿಸಬೇಕು ಎಂದು ಕರ್ನಾಟಕ ರಾಜ್ಯಕ್ಕೆ ನೇಮಕವಾಗಿರುವ ವಿಶೇಷ ವೆಚ್ಚ ವೀಕ್ಷಕರಾದ ಬಿ ಮುರುಳಿ ಕುಮಾರ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ವೆಚ್ಚ ಸಮಿತಿಯ ಅಧಿಕಾರಿಗಳು ಹಾಗೂ ಸಮಿತಿಗಳ ನೋಡೆಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಿಕೊಳ್ಳಿ ಎಂದರು.
ಅಧಿಕಾರಿಗಳು ಉಲ್ಲಂಘನೆಯ ದೂರುಗಳನ್ನು ಸ್ವೀಕರಿಸಿದಾಗ ಮತ್ತು ಅವುಗಳನ್ನು ಸ್ವೀಕರಿಸಿದಾಗ ಮತ್ತು ದೂರುಗಳ ನೋಂದಣಿ ಮತ್ತು ಅವುಗಳ ಮೇಲೆ ತೆಗೆದುಕೊಂಡ ಕ್ರಮಗಳನ್ನು ನಿರ್ವಹಿಸುವಂತೆ ತಿಳಿಸಿದರು.
ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ನಡೆಸಿ ಅಭ್ಯರ್ಥಿಯು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಚುನಾವಣಾ ಅವಧಿಯಲ್ಲಿ ಎಲ್ಲ ಬ್ಯಾಂಕುಗಳ ಮೂಲಕ ನಡೆಯಬಹುದಾದ ಅನುಮಾನಾಸ್ಪದ ವ್ಯವಹಾರಗಳು, ಹಣ ಪಡೆಯುವ ಬಗ್ಗೆ ಬ್ಯಾಂಕುಗಳು ಪ್ರತಿನಿತ್ಯ ಮಾಹಿತಿ ಒದಗಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಮಾತನಾಡಿ ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳು, ಸ್ಥಾಪನೆಯಾಗಿರುವ ಚೆಕ್ ಪೋಸ್ಟ್ ಗಳು ಹಾಗೂ ಇನ್ನಿತರೆ ಮಾಹಿತಿಗಳನ್ನು ವಿವರಿಸಿದರು.
ನಂತರ ಚುನಾವಣಾ ನಿಯಂತ್ರಣ ಕೊಠಡಿ ಮತ್ತು ಮಾಧ್ಯಮ ಪ್ರಮಾಣೀಕರಣ ಮತ್ತು ನಿಗಾ ಕೇಂದ್ರವನ್ನು ವೀಕ್ಷಕರು ಪರಿಶೀಲಿಸಿದರು.
ಸಭೆಯಲ್ಲಿ ಹುಣಸೂರು, ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಎ. ಸುರೇಶ್, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.