ಬೆಂಗಳೂರು : ಕೇತಗಾನಹಳ್ಳಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕೇಂದ್ರದ ಉಕ್ಕು ಮತ್ತು ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂಬಂಧಿ ಮಾಜಿ ಸಚಿವ ಡಿ.ಸಿ ತಮ್ಮಣ್ಣ ಮತ್ತು ಇತರರು ರಾಮನಗರದ ಬಿಡದಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಆರೋಪ ಪ್ರಕರಣದ ವಿಚಾರಣೆಗೆ ಮುಂದಿನ ಆದೇಶದವರೆಗೆ ಸುಪ್ರೀಂಕೋರ್ಟ್ ತಡೆಯೊಡ್ಡಿದೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಮತ್ತು ಅರ್ಜಿದಾರ ಸಮಾಜ ಪರಿವರ್ತನಾ ಸಮುದಾಯಕ್ಕೆ ನೋಟಿಸ್ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್, ಹೆಚ್.ಡಿ ಕುಮಾರಸ್ವಾಮಿಯವರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ್ದು, ಈ ಕುರಿತು ಮುಂದಿನ ವಿಚಾರಣೆ ನಡೆಸಲಿದೆ.
ಏನಿದು ಕೇತಗಾನಹಳ್ಳಿ ಜಮೀನು ಒತ್ತುವರಿ ಪ್ರಕರಣವೇನು?
ರಾಮನಗರ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ .ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಕರ್ನಾಟಕ ಲೋಕಾಯುಕ್ತ ವರದಿ ಅನುಸಾರ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ 2020ರಲ್ಲಿ ಆದೇಶ ನೀಡಿತ್ತು. ಆ ಆದೇಶ ಜಾರಿಗೊಳಿಸಿಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯವು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಿದೆ. ಆದ್ದರಿಂದ ಸರ್ಕಾರಿ ಭೂಮಿ ಒತ್ತುವರಿ ಪತ್ತೆ ಮಾಡಲು ರಾಜ್ಯ ಸರ್ಕಾರ 2025ರ ಜನವರಿ 28ರಂದು ಎಸ್‌ಐಟಿ ರಚಿಸಿ ಆದೇಶ ನೀಡಿತ್ತು. ಇದು ಕಾನೂನಿಗೆ ಅನುಗುಣವಾಗಿಲ್ಲ. ಆದ್ದರಿಂದ ಅದನ್ನು ರದ್ದುಗೊಳಿಸಬೇಕೆಂದು ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.















