ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ವೃತ್ತ ಸೇರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗಿದೆ.
ಮೈಸೂರು ಬೆಂಗಳೂರು ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ವಿಚಾರ ಸಂಬಂಧ ಕೇಂದ್ರ ಗೃಹ ಇಲಾಖೆ ರಾಜ್ಯಕ್ಕೆ ಸೂಚನೆ ಕೊಟ್ಟ ಬೆನ್ನಲೆ ಖಾಕಿ ಹೈ ಅಲರ್ಟ್ ಆಗಿದೆ. ದಸರಾ ಮೇಲೆ ಉಗ್ರರ ಕರಿ ನೆರಳು ಬೀಳದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದಿಂದ ತಪಾಸಣಾ ಕಾರ್ಯ ನಡೆದಿದೆ. ಅರಮನೆಯ ಇಂಚಿಂಚೂ ಬಿಡದಂತೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 47 ಟ್ಯಾಬ್ಲೊಗಳನ್ನ ಶ್ವಾನದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.
ಜನರು ರಸ್ತೆಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಕುರ್ಚಿಗಳನ್ನು ಹಾಕಲಾಗಿದ್ದು, ಜಂಬೂಸವಾರಿ ವೀಕ್ಷಿಸಲು 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ಸಾಗಲಿದ್ದು, ಜಂಬೂಸವಾರಿ ಭದ್ರತೆಗೆ 6 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನೆರವೇರಲಿದೆ.
ಜಂಬೂಸವಾರಿಯಲ್ಲಿ ಭಾಗವಹಿಸುವ ಆನೆಗಳ ಪಟ್ಟಿ
ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆ ಹೆಜ್ಜೆ ಹಾಕಲಿವೆ. ಅಭಿಮನ್ಯು, ವಿಜಯ, ವರಲಕ್ಷ್ಮೀ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮೀ, ಹಿರಣ್ಯ ಆನೆ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.