ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ.
ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಗಾಯಗೊಂಡ ವ್ಯಕ್ತಿ.
ಆತ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ ಹರಿದಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ.
ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಈ ರಸ್ತೆಯಲ್ಲಿ ಪ್ರತೀದಿನ ಶಿರ್ವದ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಪರಿಸರದ ನಾಗರಿಕರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕಾಗಿದೆ.