ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರಾದ ಕೃಷ್ಣ ಗೋಪಾಲ್, ರಾಮ್ ಲಾಲ್ ಹಾಗೂ ಅಲೋಕ್ ಕುಮಾರ್ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿ ಪ್ರತಿಷ್ಠಾಪನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, “ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸುವ ಎಲ್.ಕೆ.ಅಡ್ವಾಣಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯ ಮತ್ತು ಇತರ ಸೌಲಭ್ಯವನ್ನು ಒದಗಿಸಲಾಗುವುದು” ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಗಣ್ಯಾತಿಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಇದರ ಜೊತೆಗೆ ಎಲ್ಲಾ ಸಮುದಾಯದ ಸಾಧು-ಸಂತರಿಗೂ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಲಾಗಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ಪ್ರಕಾರ, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 16ರಂದು ಪ್ರಾರಂಭವಾಗಿ ಜನವರಿ 22ರವರೆಗೆ ನಡೆಯಲಿದೆ. ಸುಮಾರು ಏಳು ದಿನಗಳ ಕಾಲ ಹಲವು ವೈದಿಕ ವಿಧಿ, ವಿಧಾನಗಳು ನಡೆಯಲಿವೆ. ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ.
ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ವಾರಣಾಸಿಯ ಮುಖ್ಯ ವೈದಿಕರಾದ ಲಕ್ಷ್ಮಿಕಾಂತ್ ದೀಕ್ಷಿತ್ ನಡೆಸಿಕೊಡಲಿದ್ದಾರೆ. ಜನವರಿ 14ರಿಂದ ಜನವರಿ 22ರತನಕ ಅಯೋಧ್ಯೆ ಅಮೃತ ಮಹೋತ್ಸವ ಆಚರಿಸಲಿದೆ.














