ಮನೆ ಸ್ಥಳೀಯ ಲೋಕಸಭಾ ಚುನಾವಣೆ 2024: ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ

ಲೋಕಸಭಾ ಚುನಾವಣೆ 2024: ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ

0

ಮೈಸೂರು ಮಾ.16 ( ಕರ್ನಾಟಕ ವಾರ್ತೆ) ಲೋಕಸಭಾ ಸಭಾ ಚುನಾವಣೆ-2024 ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಯಾಗಿದ್ದು ರಾಜಕೀಯ ಪಕ್ಷಗಳು ಚುನಾವಣಾ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ರಾಜಕೀಯ ಪಕ್ಷಗಳಿಗೆ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಕಚೇರಿಯ ದೇವರಾಜ ಅರಸು ಸಭಾಂಗಣದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಚುನಾವಣಾ ಆಯೋಗ ನೀಡುವ ಸೂಚನೆಗಳನ್ನು ಪಾಲಿಸಬೇಕು. ಈಗಿನಿಂದಲೇ ಚುನಾವಣೆಗೆ ಸಂಬಂಧಿಸಿದ ನಿಯಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಖಾಸಗಿ ಮನೆ, ಗೋಡೆ ಹಾಗೂ ರಸ್ತೆ ಬದಿ, ಸ್ಥಳೀಯ ಸಂಸ್ಥೆಗಳ ಕಟ್ಟಡ ಇತ್ಯಾದಿಗಳಲ್ಲಿ ರಾಜಕೀಯ ಪಕ್ಷದ ವಿಷಯಗಳ ಕುರಿತು ಗೋಡೆಬರಹ, ಪೋಸ್ಟರ್‌ಗಳು, ಬ್ಯಾನರ್, ಕಟೌಟ್‌ಗಳನ್ನು ಹಾಕಿದರೆ ಅವುಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ ಎಂದರು.

ರಾಜಕೀಯ ಪಕ್ಷಗಳ ಸಂಬಂಧ ಕಾರ್ಯಕ್ರಮ ಸಂಬಂಧ ಅಧಿಕೃತವಾಗಿ ಅನುಮತಿ ಪಡೆಯುವುದು ಕಡ್ಡಾಯ. ಒಂದುವೇಳೆ ಅನುಮತಿ ಪಡೆಯದೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುವಿಧಾ ಆಪ್ ಮೂಲಕ ಚುನಾವಣಾ ಪ್ರಚಾರ ಸಭೆಗಳು ಮತ್ತು ಕಾರ್ಯಕ್ರಮಗಳಿಗೆ ಸುವಿಧಾಗೆ ಮೂಲಕ ಅನುಮತಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಪ್ರಚಾರಕ್ಕೆ ಮಕ್ಕಳನ್ನು ಬಳಸಬಾರದು.

ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮ, ಕೇಬಲ್ ಟಿವಿ, ಪೇಸ್‌ಬುಕ್, ವಾಟ್ಸ ಆ್ಯಪ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.