ಮನೆ ರಾಜಕೀಯ ಲೋಕಸಭೆ ಚುನಾವಣೆ: ರಾಜ್ಯದಲ್ಲಿ 17 ಸ್ಥಾನಗಳಲ್ಲಿ ಬಿಜೆಪಿ, ಎರಡರಲ್ಲಿ ಜೆಡಿಎಸ್; 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು

ಲೋಕಸಭೆ ಚುನಾವಣೆ: ರಾಜ್ಯದಲ್ಲಿ 17 ಸ್ಥಾನಗಳಲ್ಲಿ ಬಿಜೆಪಿ, ಎರಡರಲ್ಲಿ ಜೆಡಿಎಸ್; 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು

0

ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಅದರ ಮಿತ್ರ ಪಕ್ಷ ಜೆಡಿಎಸ್ ಎರಡು ಸ್ಥಾನಗಳಲ್ಲಿ ಹಾಗೂ ರಾಜ್ಯದ ಆಡಳಿತರೂಢ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ.

Join Our Whatsapp Group

ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜಧಾನಿ ಬೆಂಗಳೂರಿನ ಎಲ್ಲಾ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಭಾರಿ ಮುಖಭಂಗವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಡಿಕೆ ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಜಯಗಳಿಸಿದರೆ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಹಿಡಿತ ಸಾಧಿಸಿದೆ ಮತ್ತು ಜೆಡಿಎಸ್ ಎರಡು ಸ್ಥಾನಗಳನ್ನು ಗೆದ್ದಿದೆ.

2019 ರಲ್ಲಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದೆ ಮತ್ತು ಜೆಡಿಎಸ್‌ ಗೆದ್ದುಕೊಂಡ ಸ್ಥಾನಗಳು ಸೇರಿ 19ಕ್ಕೆ ಇಳಿದಿದೆ.

ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಅಳಿಯ ಮಂಜುನಾಥ್ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್, ಡಾ.ಸುಧಾಕರ್, ವಿ.ಸೋಮಣ್ಣ ಸೇರಿದಂತೆ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಬಿಜೆಪಿಯ ಕೆಲವು ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಮಾಜಿ ಸಚಿವ ಬಿ.ಶ್ರೀರಾಮುಲು ಈ ಬಾರಿಯೂ ಸೋತಿದ್ದಾರೆ.

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿರುದ್ಧ ಜಯಗಳಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿಗಳ ತವರು ಕ್ಷೇತ್ರವಾದ ಮೈಸೂರಿನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಕಳೆದುಕೊಂಡಿದೆ. ಸಿಎಂ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ತಮ್ಮ ತವರು ಕ್ಷೇತ್ರಗಳ ಅಭ್ಯರ್ಥಿಯನ್ನು ಗೆಲ್ಲಿಸಲು ವಿಫಲವಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಗುಲ್ಬರ್ಗ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಈ ಮೂಲಕ ಖರ್ಗೆ ತಮ್ಮ ತವರು ನೆಲದಲ್ಲಿ ಮತ್ತೆ ಹಿಡಿತ ಸಾಧಿಸಿದ್ದಾರೆ.