ಮನೆ ರಾಜಕೀಯ ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನು ಗೆಲ್ಲಲಿದೆ ಎಂದ ಡಿ ವಿ ಸದಾನಂದ ಗೌಡ

ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನು ಗೆಲ್ಲಲಿದೆ ಎಂದ ಡಿ ವಿ ಸದಾನಂದ ಗೌಡ

0

ಕುಕ್ಕೆ ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲಿದೆ. ಈ ಬಾರಿ ಜೆಡಿಎಸ್ ಕೂಡ ಎನ್​ಡಿಎ ಜೊತೆಯಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದ್ದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ ವಿ ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಒಂಬತ್ತುವರೆ ವರ್ಷದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದರು.

ಬಿಜೆಪಿ ನನಗೆ ಎಲ್ಲವನ್ನೂ ನೀಡಿದೆ. ಎಂಎಲ್ಎ, ಎಂಪಿ, ಎಂಎಲ್‌ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ. ನಾನು ಏನಾದರೂ ಪಕ್ಷಕ್ಕೆ ನೀಡುವುದೇ ಬಾಕಿ ಇರುವುದು. ಆದ್ದರಿಂದ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲೇ ಆಂತರಿಕ ಕಚ್ಚಾಟ ಆರಂಭಗೊಂಡಿದೆ. ಪಕ್ಷದಲ್ಲೇ ಶಾಸಕರು, ಸಚಿವರು ಅಸಮಾಧಾನ ಹೊರಹಾಕುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮನೆಯೊಂದು ನೂರು ಬಾಗಿಲಿನಂತೆ ಇದೆ. ರಾಜ್ಯದ ಜನರೇ ರಾಜ್ಯದ ಕಾಂಗ್ರೆಸ್ ಸರ್ಕಾರ ಹೆಚ್ಚು ಸಮಯ ಉಳಿಯುವುದಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದಿನಿಂದಲೂ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಲೇ ಬಂದಿದೆ ಎಂದು ತಿಳಿಸಿದರು.

ಹಿಂದಿನ ಲೇಖನನಾನೇ ಸಿಎಂ ಆಗುತ್ತೇನೆಂಬ ಕಾಲಘಟ್ಟಕ್ಕೆ ತಲುಪುವುದು ಅನಾರೋಗ್ಯಕರ: ಮಾಜಿ ಸಿಎಂ ಎಸ್.ಎಂ.ಕೃಷ್ಣ
ಮುಂದಿನ ಲೇಖನಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ: ನಳಿನ್ ಕುಮಾರ್ ಕಟೀಲ್